ನೀಟ್ ದುರಂತಕ್ಕೆ ಕಣ್ಣೀರು - ಮಹಿಳಾ ಕಾಂಗ್ರೆಸ್‌ನಿಂದ ಕ್ಯಾಂಡಲ್ ಮಾರ್ಚ್

ನೀಟ್ ದುರಂತಕ್ಕೆ ಕಣ್ಣೀರು - ಮಹಿಳಾ ಕಾಂಗ್ರೆಸ್‌ನಿಂದ ಕ್ಯಾಂಡಲ್ ಮಾರ್ಚ್

ಧಾರವಾಡ:-  ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್‌ನಿಂದ ಕ್ಯಾಂಡಲ್ ಮಾರ್ಚ್

ಧಾರವಾಡ: ದೇಶದಲ್ಲಿ ಪದೇ ಪದೇ ನಡೆಯುತ್ತಿರುವ ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಖಂಡಿಸಿ ಹಾಗೂ ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿಯನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಧಾರವಾಡದ ಜಯನಗರ ಸರ್ಕಲ್‌ನಲ್ಲಿ ಕ್ಯಾಂಡಲ್ ಮಾರ್ಚ್ ನಡೆಸಲಾಯಿತು.

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೌಮ್ಯ ರೆಡ್ಡಿ ಅವರ ನಿರ್ದೇಶನದಂತೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಮ್ಮಾ ಬಲೋಗಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನಿಲಕುಮಾರ್ ಪಾಟೀಲ್ ಮಾತನಾಡಿ, ನೀಟ್ ಪರೀಕ್ಷೆಯಲ್ಲಿ ಮರುಮರು ಪ್ರಶ್ನೆಪತ್ರಿಕೆ ಸೋರಿಕೆಯಾಗುತ್ತಿರುವುದು ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ವಿದ್ಯಾರ್ಥಿಗಳ ನಂಬಿಕೆಗೆ ಧಕ್ಕೆ ತರುತ್ತಿದೆ. ಪರೀಕ್ಷೆಯಲ್ಲಿ ಪಾರದರ್ಶಕತೆ ಹಾಗೂ ನ್ಯಾಯಸಮ್ಮತ ವ್ಯವಸ್ಥೆ ಕಾಪಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬಳಿಕ ಮಾತನಾಡಿದ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಮ್ಮಾ ಬಲೋಗಿ, ಪ್ರಶ್ನೆಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಆತಂಕಕ್ಕೀಡಾಗಿದೆ. ಮಾನಸಿಕ ಒತ್ತಡದಿಂದ ಜೀವ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ನ್ಯಾಯ ದೊರಕಬೇಕು. ಕೇಂದ್ರ ಸರ್ಕಾರವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಹಿಳಾ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ, ಮೇಣದ ದೀಪ ಬೆಳಗುವ ಮೂಲಕ ಮೃತ ವಿದ್ಯಾರ್ಥಿಗಳಿಗೆ ಮೌನ ಶ್ರದ್ಧಾಂಜಲಿ ಸಲ್ಲಿಸಿದರು.

ಮಹಿಳಾ ಬ್ಲಾಕ್ ಅಧ್ಯಕ್ಷರಾದ ಅಕ್ಕಮ್ಮ ಕಬಳಿ, ಬಾಳಮ್ಮ ಜಂಗಿನವರ, ಸ್ನೇಹಾ ಜಾಧವ, ಚೇತನಾ ಲಿಂಗದಾಳ, ರೇಷ್ಮಾ ಶೇಕ್ ಸನದಿ, ಗೀತಾ ಹೊಸಮನಿ, ದೇವಿಕಾ ಬಸವರಾಜ್, ವಿನಾಯಕುಮಾರ್ ಬಲೋಗಿ, ಕಾರ್ತಿಕ್ ನಾಯಕ, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸೇರಿದಂತೆ ಇತರರು ಭಾಗಿಯಾಗಿದ್ದರು.