ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸುವುದೇ ನಮ್ಮ ಗುರಿ: ಅರವಿಂದ ಏಗನಗೌಡ
ಧಾರವಾಡ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯು ಮಂಗಳವಾರ ತಾಲೂಕು ಪಂಚಾಯತ್ ಸಭಾಭವನದಲ್ಲಿ ಸಮಿತಿಯ ಅಧ್ಯಕ್ಷ ಶ್ರೀ ಅರವಿಂದ ಏಗನಗೌಡರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಧಾರವಾಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶ್ರೀ ಎಸ್.ಆರ್. ಪಾಟೀಲ ಮುಖ್ಯ ಅತಿಥಿಯಾಗಿ ಭಾಗವಹಿಸಿ ಗ್ಯಾರಂಟಿ ಯೋಜನೆಗಳ ಪ್ರಗತಿ ಕುರಿತು ಸಮಗ್ರ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಎಸ್.ಆರ್. ಪಾಟೀಲ ಅವರು, ಕರ್ನಾಟಕ ರಾಜ್ಯದಲ್ಲೇ ಪಂಚ ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಧಾರವಾಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು. ಈ ಸಾಧನೆಯ ಹಿಂದೆ ತಾಲೂಕು ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯದ ಕಾರ್ಯವೇ ಪ್ರಮುಖ ಕಾರಣವಾಗಿದೆ ಎಂದು ಶ್ಲಾಘಿಸಿದರು. ಇದೇ ವೇಳೆ ಅವರನ್ನು ತಾಲೂಕು ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು.
ಸಭೆಯ ಅಧ್ಯಕ್ಷರಾದ ಅರವಿಂದ ಏಗನಗೌಡ ಅವರು ಮಾತನಾಡಿ, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಜನಸಾಮಾನ್ಯರ ಬದುಕಿನಲ್ಲಿ ಮಹತ್ವದ ಬದಲಾವಣೆ ತಂದಿವೆ. ಮುಂದಿನ ಎರಡು ವರ್ಷಗಳಲ್ಲಿಯೂ ಈ ಯೋಜನೆಗಳು ಮುಂದುವರಿಯಲಿದ್ದು, ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಯೋಜನೆಗಳ ಸೌಲಭ್ಯ ತಲುಪಿಸುವುದು ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಇದುವರೆಗೆ 8 ವಿಶೇಷ ಶಿಬಿರಗಳನ್ನು ಆಯೋಜಿಸಿ, ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಕುರಿತು ಮಾಹಿತಿ ನೀಡುವುದರ ಜೊತೆಗೆ ಅವರ ಕುಂದುಕೊರತೆಗಳನ್ನು ಸ್ಥಳದಲ್ಲಿಯೇ ಪರಿಷ್ಕರಿಸಲಾಗಿದೆ ಎಂದು ಮಾಹಿತಿ ನೀಡಲಾಯಿತು.
ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳ ಜೂನ್-2026ರವರೆಗಿನ ಪ್ರಗತಿ ವರದಿಯನ್ನು ಸಭೆಯಲ್ಲಿ ಮಂಡಿಸಲಾಯಿತು.
ಗೃಹಲಕ್ಷ್ಮಿ ಯೋಜನೆಯಡಿ ಸಾವಿರಾರು ಮಹಿಳೆಯರು ಆರ್ಥಿಕ ನೆರವು ಪಡೆಯುತ್ತಿದ್ದು, ಗೃಹಜ್ಯೋತಿ ಯೋಜನೆಯಿಂದ ಹೆಚ್ಚಿನ ಕುಟುಂಬಗಳು ಉಚಿತ ವಿದ್ಯುತ್ ಸೌಲಭ್ಯವನ್ನು ಪಡೆದುಕೊಂಡಿವೆ. ಶಕ್ತಿ ಯೋಜನೆಯಡಿ ಲಕ್ಷಾಂತರ ಮಹಿಳೆಯರು ಉಚಿತ ಬಸ್ ಪ್ರಯಾಣದ ಪ್ರಯೋಜನ ಪಡೆದಿದ್ದು, ಯುವನಿಧಿ ಯೋಜನೆಯಡಿ ಪದವಿ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.
ಸಭೆಯಲ್ಲಿ ಸದಸ್ಯ ಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಗಂಗಾಧರ ಕಂದಕೂರ, ಸಮಿತಿ ಸದಸ್ಯರಾದ ಚಂದ್ರಶೇಖರ ಕದಂ, ಪರಮೇಶ್ವರ ಕರಿಕಟ್ಟಿ, ರಾಜೇಶ ಚವ್ಹಾಣ, ಸಿದ್ದಪ್ಪ ಅಗಸಿಮನಿ, ಕಲಾವತಿ ಭೀಮಕ್ಕನವರ, ಮೈಲಾರಗೌಡ ಪಾಟೀಲ, ಪರಮೇಶ್ವರ ಕಾಳೇ, ಕಾರ್ತಿಕ ಗೋಕಾಕ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
yallu