ಅಕ್ರಮ ಶೆಡ್ ನಿರ್ಮಾಣ " ತೆರವು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೋಳಿ ಅವರಿಗೆ ಮಹರ್ಷಿ ವಾಲ್ಮೀಕಿ ಯುವ ಸಂಘಟನೆ ಒತ್ತಾಯ

ಅಕ್ರಮ ಶೆಡ್ ನಿರ್ಮಾಣ " ತೆರವು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೋಳಿ ಅವರಿಗೆ ಮಹರ್ಷಿ ವಾಲ್ಮೀಕಿ ಯುವ ಸಂಘಟನೆ ಒತ್ತಾಯ


ಅಕ್ರಮ ಶೆಡ್ ತೆರವಿಗೆ ಒತ್ತಾಯ: ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೋಳಿಗೆ ಮಹರ್ಷಿ ವಾಲ್ಮೀಕಿ ಯುವ ಸಂಘಟನೆ ಮನವಿ

ಹುಬ್ಬಳ್ಳಿ: ಗೋಕುಲ ರಸ್ತೆಯ ಕೃಷಿ ಭೂಮಿಯಲ್ಲಿ ಮಹಾನಗರ ಪಾಲಿಕೆಯ ಅನುಮತಿ ಪಡೆಯದೇ ಅಕ್ರಮವಾಗಿ ನಿರ್ಮಿಸಿರುವ ಶೆಡ್ ಅನ್ನು ತಕ್ಷಣ ತೆರವುಗೊಳಿಸುವಂತೆ ಆಗ್ರಹಿಸಿ ಮಹರ್ಷಿ ವಾಲ್ಮೀಕಿ ಯುವ ಸಂಘಟನೆಯ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೋಳಿ ಅವರಿಗೆ ಮನವಿ ಸಲ್ಲಿಸಿದರು.


ಸಂಘಟನೆಯ ಆರೋಪದಂತೆ, ಕೃಷಿ ಭೂಮಿಯಲ್ಲಿ ನಿಯಮ ಉಲ್ಲಂಘಿಸಿ ಶೆಡ್ ನಿರ್ಮಿಸಿ, ಅದನ್ನು "ಸುವರ್ಣ ಗ್ರ್ಯಾನೈಟ್" ಹೆಸರಿನಲ್ಲಿ ಬಾಡಿಗೆಗೆ ನೀಡಲಾಗಿದೆ. ಈ ಬಗ್ಗೆ ಈಗಾಗಲೇ ಹಲವು ಬಾರಿ ದೂರು ನೀಡಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.


ಈ ಕುರಿತು ಮಹಾನಗರ ಪಾಲಿಕೆ ಆಯುಕ್ತರು ಅಕ್ರಮ ಶೆಡ್ ತೆರವುಗೊಳಿಸುವ ಭರವಸೆ ನೀಡಿದ್ದರೂ, ಇದುವರೆಗೆ ಯಾವುದೇ ಕಾರ್ಯಾಚರಣೆ ನಡೆದಿಲ್ಲ ಎಂದು ಸಂಘಟನೆ ಆರೋಪಿಸಿದೆ.
ಇದೇ ವೇಳೆ, ಪಾದಚಾರಿ ಮಾರ್ಗದ ಮೇಲೆ ಜೀವನೋಪಾಯ ನಡೆಸುತ್ತಿದ್ದ ಬಡ ವ್ಯಾಪಾರಿಗಳ ಅಂಗಡಿಗಳನ್ನು ತ್ವರಿತವಾಗಿ ತೆರವುಗೊಳಿಸುವ ಅಧಿಕಾರಿಗಳು, ದೊಡ್ಡ ಮಟ್ಟದ ಅಕ್ರಮ ನಿರ್ಮಾಣಗಳ ವಿರುದ್ಧ ಮಾತ್ರ ಕ್ರಮ ಕೈಗೊಳ್ಳದೇ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. "ಬಡವರಿಗೆ ಒಂದು ನ್ಯಾಯ, ಶ್ರೀಮಂತರಿಗೆ ಮತ್ತೊಂದು ನ್ಯಾಯವೇ?" ಎಂದು ಸಂಘಟನೆ ಪ್ರಶ್ನಿಸಿದೆ.
ಅಕ್ರಮ ಶೆಡ್ ಅನ್ನು ಕೂಡಲೇ ತೆರವುಗೊಳಿಸಿ, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು.

ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮಹರ್ಷಿ ವಾಲ್ಮೀಕಿ ಯುವ ಸಂಘಟನೆ ಎಚ್ಚರಿಕೆ ನೀಡಿದೆ.

ವರದಿ ರಾಜು ಮುದ್ಗಲ್ ಹುಬ್ಬಳ್ಳಿ